ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ

deputy-speaker-anand-mamani-passes-away

ಬೆಂಗಳೂರು: ರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳುರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲದೇ ಇತ್ತೀಚೆಗಷ್ಟೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಆನಂದ್ ಮಾಮನಿ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆಗೆ ಬರುತ್ತೇನೆ, ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.

ಇನ್ನು ಆನಂದ ಮಾಮನಿ ಅವರ ನಿಧನದ ವಿಷಯ ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಆನಂದ ಮಾಮನಿ ಅವರು ಮೂರುಬಾರಿ ಸವದತ್ತಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇದಲ್ಲದೇ ವಿಧಾನಸಭೆಯ 24 ನೇಯ ಉಪ ಸಭಾಪತಿಯಾಗಿ ಸಹ ಕಾರ್ಯನಿರ್ವಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

LEAVE A REPLY

Please enter your comment!
Please enter your name here