ಟೊಕಿಯೊ: ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ.
ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಮಹಿಳಾ ಬಾಕ್ಸಿಂಗ್ನ 69 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಲವ್ಲಿನಾ, ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ತಿರುಗಿ ಬೀಳಲು ಸಾಧ್ಯವಾಗಲೇ ಇಲ್ಲ. ಬುಸೆನಾಜ್ ಅವರ ಆಕ್ರಮಣಕಾರಿ ಆಟಕ್ಕೆ ಸೋಲು ಅನುಭವಿಸಿದರು. ಆಗಲೇ ಸೆಮಿಫೈನಲ್ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದ ಲವ್ಲಿನಾ, ಚಿನ್ನದ ಪದಕ ಗುರಿಯನ್ನಿರಿಸಿದ್ದರು.
ಲವ್ಲಿನಾ ಬೊರ್ಗೊಹೈನ್ ಸೋತರೂ ವಿಶೇಷ ಸಾಧನೆ ಮಾಡಿದ್ದಾರೆ. ಬಾಕ್ಸಿಂಗ್ನಲ್ಲಿ ಚಿನ್ನದ ಪದಕ ಗೆಲುವಿನ ಸನಿಹಕ್ಕೇರಿದ ಮೊದಲ ಭಾರತೀಯರೆನಿಸಲಿದ್ದಾರೆ.